ಕಾಂಗ್ರೆಸ್ ಬೆನ್ನಲ್ಲೇ ಕಿಚ್ಚ ಸುದೀಪ್ ಗೆ ಬಿಜೆಪಿಯಿಂದಲೂ ಆಹ್ವಾನ!

ಚಿಕ್ಕಬಳ್ಳಾಪುರ : ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಸ್ಟಾರ್ ನಟರನ್ನು ಸೆಳೆಯಲು ರಾಜಕೀಯ ಪಕ್ಷಗಳು ಮುಂದಾಗಿದ್ದು, ಇದೀಗ ನಟ ಕಿಚ್ಚ ಸುದೀಪ್ ಬಿಜೆಪಿಗೆ ಆಹ್ವಾನಿಸುವ ಕುರಿತಂತೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಸುಳಿವು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ.ಕೆ. ಸುಧಾಕರ್, ನಟ ಕಿಚ್ಚ ಸುದೀಪ್ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಸೇರುವುದಿಲ್ಲ. ಸುದೀಪ್ ಪ್ರಖ್ಯಾತ ನಟರು, ನನಗೆ ಇರುವ ಮಾಹಿತಿ ಪ್ರಕಾರ ಅವರು ಕಾಂಗ್ರೆಸ್ ಪಕ್ಷ ಸೇರುವುದಿಲ್ಲ. ಆದರೆ ಅವರು ಯಾವುದೇ ಪಕ್ಷಕ್ಕೆ ಹೋದರೂ ಲಾಭವಿದೆ. ನಾವು ಕೂಡ ಕಾದು ನೋಡೋಣ ಎನ್ನುವ ಮೂಲಕ ಸುದೀಪ್ ರನ್ನು ಬಿಜೆಪಿಗೆ ಆಹ್ವಾನಿಸುವ ಬಗ್ಗೆ ಸುಳಿವು ನೀಡಿದ್ದಾರೆ.
ಇನ್ನು ನಟ ಸುದೀಪ್ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಗುರುವಾರ ರಾತ್ರಿ ಭೇಟಿಯಾಗಿದ್ದು, ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.