ಮಾ.12 ರಂದು ವಸತಿ ಶಾಲೆಗಳ ಪ್ರವೇಶ ಪರೀಕ್ಷೆ

ಶಿವಮೊಗ್ಗ: ಜಿಲ್ಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿಗೆ ಮಾ.12 ರಂದು ಪ್ರವೇಶ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಎಸ್.ಎಸ್.ಬಿರಾದರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರಶ್ನೆ ಪತ್ರಿಕೆ ಸಾಗಾಟ ಮಾಡಲು ತ್ರಿಸದಸ್ಯರ ಸಮಿತಿ ನೇಮಿಸಿ ಆದೇಶಿಸಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀ. ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು. ಪರೀಕ್ಷೆ ಕರ್ತವ್ಯಕ್ಕೆ ಸಂಬಂಧಿಸಿದ ಮಾರ್ಗಾಧಿಕಾರಿಗಳು, ಪರಿವೀಕ್ಷಕರು ಹಾಗೂ ಇನ್ನಿತರೆ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಕಾರ್ಯಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಈಗಲೇ ಆಸನಗಳು, ಮೂಲಭೂತ ಸೌಕರ್ಯಗಳ ಕುರಿತು ಪರೀಕ್ಷಾ ಕೇಂದ್ರಗಳಿಗೆ ತೆರಳಿ ಖಾತ್ರಿಪಡಿಸಿಕೊಳ್ಳಬೇಕು. ಪರೀಕ್ಷಾ ಸಮಯದಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಮೆಸ್ಕಾಂ ಇಲಾಖೆ ನಿಗಾ ವಹಿಸಬೇಕು. ಹಾಗೂ ಪರೀಕ್ಷಾ ಸಮಯದಲ್ಲಿ ಯಾವುದೇ ಗೊಂದಲಗಳಿಗೆ ಎಡೆಮಾಡದೆ, ವ್ಯವಸ್ಥಿತವಾಗಿ ಪರೀಕ್ಷೆ ನಡೆಯಲು ಅಗತ್ಯವಾದ ಎಲ್ಲ ರೀತಿಯ ಕ್ರಮಗಳನ್ನು ಕೈಗೊಂಡು, ಸಿದ್ದವಾಗಿರುವಂತೆ ಸೂಚನೆ ನೀಡಿದರು. ಡಿಡಿಪಿಯು ಬಿ.ಕೃಷ್ಣಪ್ಪ, ಪರೀಕ್ಷಾಧಿಕಾರಿಗಳು ಅನುಸರಿಸಬೇಕಾದ ಮಾರ್ಗಸೂಚಿಗಳ ಬಗ್ಗೆ ತಿಳಿಸಿದರು. ಸಭೆಯಲ್ಲಿ ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ, ಜಿಲ್ಲಾ ಖಜಾನಾಧಿಕಾರಿ ಸಾವಿತ್ರಿ, ಪರೀಕ್ಷೆಯ ಅಧಿಕಾರಿಗಳು ಹಾಜರಿದ್ದರು.